Courtesy :
ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ಖುರ್ಚಿಗಾಗಿ ಕಾಳಗ ತೀವ್ರಗೊಂಡಿದ್ದು, ರೈತರ ಸಮಸ್ಯೆ ಕೇಳಲು ಯಾರಿಗೂ ಸಮಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಟನ್ ಕಬ್ಬಿಗೆ 3,500 ರೂ. ನೀಡುವಂತೆ ಗುರ್ಲಾಪುರ ಬಳಿ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರವೇ ಮುಂದಾಳತ್ವ ವಹಿಸಿ ಅವರ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಬೇಕಿತ್ತು. ಆದರೆ, ರಾಜ್ಯ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಅವರ ಹೋರಾಟಕ್ಕೆ ಬೆಂಬಲ ಸೂಚಿಸಲು ಇಲ್ಲಿಗೆ ಬಂದಿದ್ದೇವೆಂದು ಹೇಳಿದರು.ರಾಜ್ಯದಲ್ಲಿ 2014ರಲ್ಲಿ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆದ ವೇಳೆ ಕಬ್ಬಿನ ವಿಚಾರವಾಗಿಯೇ ರೈತ ವಿಠ್ಠಲ ಅರಭಾವಿ ಪ್ರಾಣ ಕಳೆದುಕೊಂಡರು. ಆಗ ಬಿ.ಎಸ್.ಯಡಿಯೂರಪ್ಪ ಹೋರಾಟ ಮಾಡಿ ಅಂದಿನ ಮುಖ್ಯಮಂತ್ರಿ ಮೇಲೆ ಒತ್ತಡ ತಂದು, ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ, ಇಂದು ರೈತರು ಸಂಕಷ್ಟ ಎದುರಿಸುತ್ತಿದ್ದರೂ ಸರ್ಕಾರ ಕಿಂಚಿತ್ತು ಕಾಳಜಿ ತೋರುತ್ತಿಲ್ಲ ಎಂದು ಕಿಡಿಕಾರಿದರು. ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಪೈಪೋಟಿ ಏರ್ಪಟ್ಟಿದ್ದು, ಬೀದಿಗಿಳಿದು ಹೊಡೆದಾಟ-ಬಡಿದಾಟ ನಡೆದಿದೆ. ನವೆಂಬರ್ ತಿಂಗಳಿಗೆ ಏನಾಗುತ್ತೋ ಕಾದು ನೋಡೋಣ. ಆದರೆ, ಸಿಎಂ, ಡಿಸಿಎಂ, ಸಚಿವರುಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಹೇಳಿದರು.
04-11-2025